ಮೋದಿ ಸೌಜನ್ಯಕ್ಕಾದರೂ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿಲ್ಲ: ವೈ.ಎಸ್.ವಿ.ದತ್ತಾ

ಬುಧವಾರ, 21 ಸೆಪ್ಟಂಬರ್ 2016 (16:10 IST)
ಸಿಎಂ ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಮುಖ್ಯಮಂತ್ರಿಯಲ್ಲ. ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಹಲವು ಭಾರಿ ಪತ್ರ ಬರೆದಿದ್ದಾರೆ. ಆದರೆ, ಸೌಜನ್ಯಕಾಗಿಯೂ ಮೋದಿ ಅವರು ಸಿದ್ದರಾಮಯ್ಯನವರನ್ನು ಭೇಟಿ ಮಾಡುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 224 ಶಾಸಕರ ಹಾಗೂ 28 ಸಂಸದರು ಸಾಮೂಹಿಕ ರಾಜೀನಾಮೆ ನೀಡಿ ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಿ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ಸಲಹೆ ನೀಡಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಇದು ಶಾಸಕಾಂಗದ ಮೇಲೆ ನಡೆದ ನ್ಯಾಯಾಂಗದ ದಾಳಿಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾವಿ ಅವರೊಂದಿಗೆ ತೆರಳುವುದಾಗಿ ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ