ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್?

ಶನಿವಾರ, 28 ಮೇ 2016 (14:08 IST)
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ಜೊತೆ ಚರ್ಚೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಈ ಹಿಂದೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಲು ಪಕ್ಷ ನಿರ್ಧರಿಸಿತ್ತು. ಆದರೆ, ಎ.ಮಂಜು ಸ್ಪರ್ಧೆಯಿಂದ ಹಿಂದೆ ಸರಿದ ಕಾರಣವಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 
 
ರಾಜ್ಯ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಲು ನನ್ನ ಅಭ್ಯಂತರವಿಲ್ಲ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಮುಕ್ತಾಯದ ನಂತರ ನೂತನ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಎಐಸಿಸಿ ಮೂಲಗಳು ತಿಳಿಸಿವೆ. 
 
ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸಿದೆ ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.
 
ಮುಂಬರುವ ಜೂನ್ ತಿಂಗಳಲ್ಲಿ ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಅವಧಿ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಹೊಸ ಸಾರಥಿಯ ಆಯ್ಕೆಯ ಬಗ್ಗೆ ಹೈಕಮಾಂಡ್ ಜಿ.ಪರಮೇಶ್ವರ್ ಅಭಿಪ್ರಾಯಕ್ಕೆ ಮಣೆಹಾಕಿದಂತಾಗಿದೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ