ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪು ಇಂದು ಹೈಕೋರ್ಟ್ ಪ್ರಕಟಿಸಲಿದೆ.
ಮೇ 31 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಬಂಧಿಸಿತ್ತು. ಇದಾದ ಬಳಿಕ ಅವರನ್ನು ಕೆಲವು ದಿನ ಎಸ್ ಐಟಿ ವಶದಲ್ಲಿರಿಸಲಾಗಿತ್ತು. ಬಳಿಕ ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಇದೀಗ ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದಕ್ಕೆ ಮೊದಲು ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟಿಸಲಿದೆ.
ಮೂಲಗಳ ಪ್ರಕಾರ ಇಂದೂ ಪ್ರಜ್ವಲ್ ಗೆ ಜಾಮೀನು ಸಿಗುವುದು ಅನುಮಾನವಾಗಿದೆ. ಈಗಷ್ಟೇ ಪುರುಷತ್ವ ಪರೀಕ್ಷೆಯ ವರದಿ ಬಂದಿದೆ. ಪ್ರಕರಣ ತನಿಖಾ ಹಂತದಲ್ಲಿದೆ. ಧ್ವನಿ ಪರೀಕ್ಷೆ ನಡೆಸಲಾಗಿದ್ದು ಅದರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಪ್ರಜ್ವಲ್ ರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಸಾಧ್ಯತೆಯೇ ಹೆಚ್ಚಾಗಿದೆ.