ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ: ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ

Sampriya

ಶುಕ್ರವಾರ, 8 ಆಗಸ್ಟ್ 2025 (10:05 IST)
ಬೆಂಗಳೂರು: ಚುನಾವಣಾ ಆಯೋಗದ ವಿರುದ್ಧ ತೊಡೆತಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಬೆಂಗಳೂರಿನಲ್ಲಿ ಹೋರಾಟಕ್ಕೆ ಇಳಿಯಲಿದ್ದಾರೆ. ರಾಹುಲ್‌ ನೇತೃತ್ವದಲ್ಲಿ ಇಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಪ್ರತಿಭಟನೆಯ ಬಳಿಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಮತಗಳ್ಳತನದ ಕುರಿತಂತೆ ದಾಖಲೆ ಸಹಿತ ದೂರು ನೀಡಲಿದ್ದಾರೆ.

ಚುನಾವಣಾ ಆಯೋಗ ಬಿಜೆಪಿಗೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಿದೆ. ಮತಗಳವಿಗೆ ನೆರವು ನೀಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದರು. ಅದರ ಕುರಿತು ಜನಾಂದೋಲನ ಸೃಷ್ಟಿಯಾಗುವಂತೆ ಮಾಡಲು ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿದೆ. 

ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಸಮಾವೇಶದಲ್ಲಿ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ದೇಶದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಪ್ರತಿಭಟನಾ ಸಮಾವೇಶಕ್ಕಾಗಿ ಸ್ವಾತಂತ್ರ್ಯ ಉದ್ಯಾನದ ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ತಳ ಮಹಡಿಯಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಜೊತೆಗೆ ಸಾರ್ವಜನಿಕರಿಗಾಗಿ 8 ಸಾವಿರ ಆಸನಗಳನ್ನು ಅಳವಡಿಸಲಾಗಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿಯೂ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ವೇದಿಕೆ ಕಾರ್ಯ ಕ್ರಮ ವೀಕ್ಷಣೆಗಾಗಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ.

ಕಾಂಗ್ರೆಸ್ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಸ್ವಾತ್ರಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಪೊಲೀಸರು ಬದಲಾವಣೆ ಮಾಡಿದ್ದಾರೆ. ಫ್ರೀಡಂಪಾರ್ಕ್‌ ಮಾರ್ಗದ ಶೇಷಾದ್ರಿ ರಸ್ತೆ ವ್ಯಾಪ್ತಿಯಲ್ಲಿ ಸಂಚರಿಸುವ ನಾಗರಿಕರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದ್ದು, ಸಂಚಾರ ಬದಲಾವಣೆಗೆ ಸಹಕರಿಸುವಂತೆ ಜನರಲ್ಲಿ ಸಂಚಾರ ವಿಭಾಗದ ಪೊಲೀಸರು ಕೋರಿದ್ದಾರೆ.

12 ಡಿಸಿಪಿಗಳು, 45 ಎಸಿಪಿಗಳು, 128 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 421 ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳು, 591 ಮಹಿಳಾ ಪೊಲೀಸ್ ಸಿಬ್ಬಂದಿ, 14 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ತುಕಡಿಗಳು ಮತ್ತು ಎರಡು ಮಹಿಳಾ ತುಕಡಿಗಳು ಸೇರಿದಂತೆ ಸುಮಾರು 4459 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ