ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.57.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬುಧವಾರ, 25 ಮೇ 2016 (10:56 IST)
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಶೇ.57.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಖಾತೆ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
 
ಇಂದು ಮಲ್ಲೇಶ್ವರಂನಲ್ಲಿರುವ ಪಿಯು ಬೋರ್ಡ್‍ನಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
 
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರವಾಸಿಗಳು ಉತ್ತಮ ಸಾಧನೆ ಮಾಡಿದ್ದು, ಈ ವರ್ಷವು ಸಹ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ ಎಂದು ಸಚಿವ ಕಿಮ್ಮನೆ ರತ್ನಾಕರ್ ಮಾಹಿತಿ ನೀಡಿದ್ದಾರೆ.
 
ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ, ಪ್ರಸಕ್ತ ಸಾಲಿನಲ್ಲಿ 3 ಪ್ರತಿಶತ ಕುಸಿತ ಕಂಡಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಗಳಿಸಿದ್ದು, ಉಡುಪಿ ದ್ವಿತೀಯ ಹಾಗೂ ಕೊಡಗು ತೃತೀಯ ಸ್ಥಾನ ಪಡೆದಿದೆ. ಕಳೆದ ವರ್ಷದಂತೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
 
ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೊಟ್ಟರು ಗ್ರಾಮದ ಇಂದೂ ಪಿಯು ಕಾಲೇಜ್ ವಿದ್ಯಾರ್ಥಿ ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವಿಜಯಪುರ್ ಜಿಲ್ಲೆಯ ವಿ.ಎಸ್‌.ದರ್ಬಾರ್ ಕಾಲೇಜಿನ ವಿದ್ಯಾರ್ಥಿನಿ ಸಹನಾ ಕುಲಕರ್ಣಿ ಮತ್ತು ವಿಜ್ಞಾನ ವಿಭಾಗದಲ್ಲಿ ಸರದಾರ ವಲ್ಲಭ ಭಾಯಿ ಪಟೇಲ್ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ