ಪಿಯುಸಿ ಫಲಿತಾಂಶ ಗೊಂದಲ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದ ಬಿಎಸ್‌ವೈ

ಶನಿವಾರ, 23 ಮೇ 2015 (12:03 IST)
2015ನೇ ಸಾಲಿನ ಪಿಯುಸಿ ಫಲಿತಾಂಶದಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ತಮ್ಮ ಜವಾಬ್ದಾರಿ ನಿರ್ವಹಿಸಲು ವಿಫಲರಾಗಿದ್ದು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
 
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಸಂಪುಟದಲ್ಲಿನ ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಅಲ್ಲದೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು. 
 
ಇದೇ ವೇಳೆ, ಅಕ್ರಮ ಲಾಟರಿ ಜಾಲ ಪ್ರಕರಣದಲ್ಲಿ ರಾಜ್ಯ ಗೃಹ ಇಲಾಖೆಯ ಉನ್ನತ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸ್ವತಃ ಸಿಐಡಿ ಅಧಿಕಾರಿಗಳೇ ವರದಿ ನೀಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು. 
 
ಇನ್ನು ಲಾಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಐಡಿ ಅಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ ಡಿಜಿಪಿ, ಎಡಿಜಿಪಿ ಹಾಗೂ ಎಸ್‌ಪಿಗಳೂ ಸೇರಿದಂತೆ ಗೃಹ ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ತಿಳಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. 

ವೆಬ್ದುನಿಯಾವನ್ನು ಓದಿ