ಮಂಡ್ಯ: ಲೋಕಸಭೆ ಚುನಾವಣೆ ಪ್ರಚಾರ ಬಿರುಸುಗೊಂಡಿದ್ದು ಇಂದು ರಾಜ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಇಂದು ಅವರು ಮಂಡ್ಯಕ್ಕೆ ಆಗಮಿಸಲಿದ್ದಾರೆ.
ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರೆಲ್ಲರೂ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಮಂಡ್ಯದಿಂದ ಈ ಬಾರಿ ಸ್ಟಾರ್ ಚಂದ್ರು ಕಣಕ್ಕಿಳಿದಿದ್ದಾರೆ. ಅವರ ಪರವಾಗಿ ರಾಹುಲ್ ಗಾಂಧಿ ಇಂದು ಬಿರುಸಿನ ಪ್ರಚಾರ ಮಾಡಲಿದ್ದಾರೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರನ್ನು ಸೋಲಿಸಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದೆ.
ಈ ಬಗ್ಗೆ ಮಾತನಾಡಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯವರು ಮಂಡ್ಯ ಮತ್ತು ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30 ಕ್ಕೆ ಮಂಡ್ಯಕ್ಕೆ ಬರಲಿದ್ದಾರೆ. ನಂತರ ಕೋಲಾರದಲ್ಲಿ ಪ್ರಚಾರದಲ್ಲಿ ಭಾಗಿಯಾಗುತ್ತಾರೆ. ಅಲ್ಲಿಂದ ದೆಹಲಿಗೆ ವಾಪಸಾಗಲಿದ್ದಾರೆ ಎಂದಿದ್ದಾರೆ.
ರಾಹುಲ್ ಗಾಂಧಿ ನಿನ್ನೆ ಕೇರಳದಲ್ಲಿ ಪ್ರಚಾರ ನಡೆಸಿದ್ದರು. ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಅವರು ಹೆಚ್ಚು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದ್ದರು. ಇದೀಗ ರಾಹುಲ್ ಗಾಂಧಿ ಸರದಿ. ಮಂಡ್ಯದಲ್ಲಿ ರಾಹುಲ್ ಜೊತೆ ಯಾವೆಲ್ಲಾ ನಾಯಕರು ಭಾಗಿಯಾಗಲಿದ್ದಾರೆ ಎಂದು ಕಾದುನೋಡಬೇಕಿದೆ.