ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಿನ್ನೆಯೂ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿಯತ್ತಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇಂದೂ ಮಳೆಯ ಅಬ್ಬರ ಮುಂದುವರಿದಿದೆ. ಇನ್ನೂ ಎರಡು ದಿನಗಳ ಕಾಲ ನಿರಂತರ ಮಳೆಯಾಗುವ ಸೂಚನೆಯಿದೆ.
ಹಲವು ಮನೆಗಳು ಹಾನಿಯಾಗಿದ್ದು ತುರ್ತು ಪರಿಸ್ಥಿತಿ ನಿಭಾಯಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಪ್ರವಾಸಿಗರು ಬೀಚ್, ಫಾಲ್ಸ್ ಗಳಿಗೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ಮಂಗಳೂರಿನ ಪ್ರಸಿದ್ಧ ಪಣಂಬೂರು ಬೀಚ್ ಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಿಂದಾಗಿ ಬೆಳೆ ನಷ್ಟವಾಗಿದೆ. ಶರಾವತಿ, ಗುಂಡಬಾಳ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವರು ಮನೆಗಳಿಗೆ ನೀರು ನುಗ್ಗಿದ್ದರಿಂದ ಸಂಕಷ್ಟಕ್ಕೀಡಾಗಿದ್ದಾರೆ. ಎನ್ ಡಿಆರ್ ಎಫ್ ಸಿಬ್ಬಂದಿಗಳು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಇದೇ ರೀತಿ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.