ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ, ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಾದ್ಯಂತ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.