ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ರಾತ್ರಿ ಮಳೆಯಾಗುತ್ತಿದೆ. ಇದರಿಂದಾಗಿ ರಸ್ತೆ, ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇಂದೂ ಕೂಡಾ ಮೋಡ ಕವಿದ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 19.2 ಡಿಗ್ರಿ ಸೆಲ್ಸಿಯಸ್ ನಷ್ಟಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10 ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಮಳೆಯ ಜೊತೆಗೆ ಬಿರುಗಾಳಿ, ಗುಡುಗು ಕಂಡುಬರುತ್ತಿದೆ. ಹೀಗಾಗಿ ನಾಗರಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಕಡಲ ತೀರಗಳಿಗೆ ಹೋಗಲು ಇದು ಸಕಾಲವಲ್ಲ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.