ಆಗಸ್ಟ್ 13ರವರೆಗೆ ವ್ಯಾಪಾಕ ಮಳೆ: ಹವಾಮಾನ ಇಲಾಖೆ

ಸೋಮವಾರ, 9 ಆಗಸ್ಟ್ 2021 (20:45 IST)

ಬೆಂಗಳೂರು: ನೈರುತ್ಯ ಮುಂಗಾರು ಸೋಮವಾರ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ.

ಬೆಳಗಾವಿಯ ಕಟ್ಕೋಲ್‌ನಲ್ಲಿ 4 ಸೆಂ.ಮೀ., ಬಾಗಲಕೋಟೆಯ ಕೆರೂರು, ಕೊಡಗಿನ ಭಾಗಮಂಡಲ, ಮೈಸೂರಿನ ಸಾಲಿಗ್ರಾಮ, ಬೆಂಗಳೂರು ನಗರ, ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಹೊಸದುರ್ಗದಲ್ಲಿ ತಲಾ 3 ಸೆಂ.ಮೀ., ಉಡುಪಿಯ ಕೊಲ್ಲೂರು, ಕೋಲಾರ, ದಾವಣಗೆರೆಯ ಚನ್ನಗಿರಿಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಲ್. ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 10ರಿಂದ 13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ