ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್ ಮಹಿಳೆ ಹಾಗೂ ಹೋಮ್ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರ ಖಂಡಿಸಿದ್ದಾರೆ.
ಈ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ.
ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.
ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು.
ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.