ಬೆಳಗಾವಿ: ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಯುಪಿ ಸರ್ಕಾರ ತಲಾ ₹25 ಲಕ್ಷ ಪರಿಹಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಪ್ರಯಾಗ್‌ರಾಜ್ ಜಿಲ್ಲಾಧಿಕಾರಿ ರವಿ ಮಂದರ್ ಅವರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಕಾಲ್ತುಳಿತದಲ್ಲಿ ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ ಅವರ ಕುಟುಂಬಸ್ಥರ ಖಾತೆಗಳಿಗೆ ನೇರವಾಗಿ ಪರಿಹಾರ ಧನ ಜಮೆ ಆಗಿದೆ. ನಾವು ಗ್ರಾಮ ಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಿದ್ದೇವೆ ಎಂದು ಹೇಳಿದರು.
ಜಿಲ್ಲೆಯಿಂದ ಮಹಾಕುಂಭ ಮೇಳಕ್ಕೆ ತೆರಳಿದವರಲ್ಲಿ ಒಟ್ಟು 16 ಮಂದಿ ಸಾವನ್ನಪ್ಪಿದ್ದಾರೆ.
ನಾಲ್ವರು ಕಾಲ್ತುಳಿತದಲ್ಲಿ 10 ಮಂದಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಹಾಗೂ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಮಾತ್ರ ಉತ್ತರ ಪ್ರದೇಶ ಸರ್ಕಾರ ಪರಿಹಾರ ಘೋಷಿಸಿದೆ.