ಮತದಾರರ ಪಟ್ಟಿ ಪರಿಷ್ಕರಣೆ; ಮತ್ತೊಮ್ಮೆ ಖಾತರಿಪಡಿಸಿಕೊಳ್ಳಿ: ವಿ.ಅನ್ಬುಕುಮಾರ್
ಬುಧವಾರ, 2 ಫೆಬ್ರವರಿ 2022 (20:44 IST)
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 01-01-2022 ಕ್ಕೆ ಅನ್ವಯವಾಗುವಂತೆ ಇತ್ತೀಚೆಗೆ ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು, ಸರಿಪಡಿಸುವುದು ಹಾಗೂ ತೆಗೆದುಹಾಕುವುದು ಮತ್ತಿತರ ಕಾರ್ಯಗಳು ನಡೆದಿದೆ. ಆ ದಿಸೆಯಲ್ಲಿ ಈಗಾಗಲೇ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಖಾತರಿ ಪಡಿಸಿಕೊಳ್ಳುವಂತೆ ತಹಶೀಲ್ದಾರರು ಹಾಗೂ ಕಂದಾಯ ನಿರೀಕ್ಷಕರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಇದುವರೆಗೆ ಆಗಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆಯು ನಿರಂತರ ಪ್ರಕ್ರಿಯೆ ಆಗಿದ್ದರೂ ಸಹ, ಇತ್ತೀಚೆಗೆ ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ಸರಿಪಡಿಸುವುದು ಹಾಗೂ ತೆಗೆಯುವ ಕಾರ್ಯಗಳು ನಡೆದಿದೆ. ಆ ದಿಸೆಯಲ್ಲಿ ಯಾವ ಯಾವ ಪ್ರದೇಶದಲ್ಲಿ ಹೆಚ್ಚು ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ. ಆ ಗ್ರಾಮಗಳಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಸಲಹೆ ಮಾಡಿದರು.
ಜೊತೆಗೆ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಯಾವ ಗ್ರಾಮಗಳಲ್ಲಿ ಅರ್ಜಿ ಸಲ್ಲಿಸಿಲ್ಲ, ಅಂತಹ ಗ್ರಾಮಗಲ್ಲಿಯೂ ಗಮನಹರಿಸಬೇಕು. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಅವರು ನಿರ್ದೇಶನ ನೀಡಿದರು.
ಮತದಾರರ ಪಟ್ಟಿ ವಿಶೇಷ ಅಭಿಯಾನ ಸಂದರ್ಭದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾದವರಿಗೆ ಚುನಾವಣಾ ಮತದಾರರ ಗುರುತಿನ ಚೀಟಿಯನ್ನು ನೀಡಬೇಕು. ಗುರುತಿನ ಚೀಟಿ ತಲುಪಿಸಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ವಿ.ಅನ್ಬುಕುಮಾರ್ ಅವರು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಸರಿಪಡಿಸುವುದು, ತೆಗೆದುಹಾಕುವುದು ಮತ್ತಿತರ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಬಾರದು. ಸಂವಿಧಾನಾತ್ಮಕವಾಗಿ ಕೆಲಸ ನಿರ್ವಹಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಕಂದಾಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯನ್ನು ತಾಲ್ಲೂಕುವಾರು ಮತ್ತು ಕ್ಷೇತ್ರವಾರು ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದವರಿಗೆ ಗುರುತಿನ ಚೀಟಿಯನ್ನು ತಲುಪಿಸಿ ಸ್ವೀಕೃತಿ ಪಡೆಯಲಾಗುವುದು. ಚುನಾವಣಾ ಆಯೋಗದ ನಿರ್ದೇಶನ ಪಾಲಿಸಲಾಗುವುದು ಎಂದರು.
ತಹಶೀಲ್ದಾರರಾದ ಪಿ.ಎಸ್.ಮಹೇಶ್(ಮಡಿಕೇರಿ) ಹಾಗೂ ಯೋಗಾನಂದ(ವಿರಾಜಪೇಟೆ) ಅವರು ಮಾತನಾಡಿ ಅಂತಿಮ ಮತದಾರರ ಪಟ್ಟಿಯನ್ನು 2022 ರ ಜನವರಿ, 13 ರಂದು ಜಿಲ್ಲೆಯ ನಾಡಕಚೇರಿ, ತಾಲ್ಲೂಕು ಕಚೇರಿ, ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು. ಪೌರಾಯುಕ್ತರಾದ ರಾಮದಾಸ್, ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು ಇತರರು ಇದ್ದರು.