ಬೆಂಗಳೂರು: ಹೆಚ್ಚುತ್ತಿರುವ ಡೆಂಘಿಯನ್ನು ನಿರ್ವಹಿಸುವಲ್ಲಿ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿಯೂ ಪ್ರಮುಖವಾಗಿದ್ದು ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಏಕರೂಪದ ದರ ನಿಗದಿ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದರು.
ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ಡೆಂಘೀ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬುಧವಾರವೇ ದರ ನಿಗದಿ ಕುರಿತು ಸುತ್ತೋಲೆ ಹೊರಡಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.
ಸಭೆ ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಜನವರಿಯಿಂದ ಜೂನ್ ಅಂತ್ಯದವರೆಗೆ 6187 ಡೆಂಘೀ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 6 ಜನ ಸಾವನ್ನಪ್ಪಿದ್ದು, ಸದ್ಯ ಡೆಂಘಿ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಸಾವುಗಳನ್ನ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ. ಇನ್ನೂ ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ಡೆಂಗಿ ಪರೀಕ್ಷೆ, ಚಿಕಿತ್ಸೆಗಾಗಿ ಸರ್ಕಾರವು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಏಕ ರೂಪದ ದರ ನಿಗದಿ ಮಾಡಿ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ. ಈ ಆದೇಶವನ್ನು ಎಲ್ಲಾ ಖಾಸಗಿ ಆಸ್ಪತ್ರೆಗಳು ಪಾಲಿಸಬೇಕು. ಡೆಂಗಿ ನಿಯಂತ್ರಿಸುವಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಡೆಂಗಿಯನ್ನು ನಿರ್ವಹಿಸುವಲ್ಲಿ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿಯೂ ಪ್ರಮುಖವಾಗಿದ್ದು ಈ ಸಂದರ್ಭವನ್ನು ಅವರು ಲಾಭಗಳಿಸುವ ಅವಕಾಶವನ್ನಾಗಿ ಮಾಡಿಕೊಳ್ಳಬಾರದು.
ಈ ಹಿನ್ನೆಲೆಯಲ್ಲಿ ಡೆಂಗಿ ಪರೀಕ್ಷೆ, ಚಿಕಿತ್ಸೆಗಾಗಿ ಸರ್ಕಾರವು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಏಕ ರೂಪದ ದರ ನಿಗದಿ ಮಾಡಿ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ. ಈ ಆದೇಶವನ್ನು ಎಲ್ಲಾ ಖಾಸಗಿ ಆಸ್ಪತ್ರೆಗಳು ಪಾಲಿಸಬೇಕು. ಡೆಂಗಿ ನಿಯಂತ್ರಿಸುವಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು.