ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದರು.
ಲೋಕಸಭಾ ಚುನಾವಣೆಯ ಮತದಾನದ ನಂತರ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಪ್ರಜ್ವಲ್, 35 ದಿನಗಳ ನಂತರ ಜರ್ಮನಿಯಿಂದ ನಗರದ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ ಬಂದಿಳಿದರು. ನಿಲ್ದಾಣದಲ್ಲೇ ಜಮಾಯಿಸಿದ್ದ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದರು.
ಹೊಳೆನರಸೀಪುರ ನಗರ ಠಾಣೆ ಹಾಗೂ ಸಿಐಡಿ ಠಾಣೆಗಳಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಹಾಗೂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು.
ಅಜ್ಞಾತ ಸ್ಥಳದಿಂದ ಇತ್ತೀಚೆಗೆ ವಿಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಶುಕ್ರವಾರ ಎಸ್‌ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು. ಪ್ರಜ್ವಲ್ ಜರ್ಮನಿಯಿಂದ ಬರುತ್ತಿದ್ದ ಮಾಹಿತಿ ಕಲೆಹಾಕಿದ್ದ ಎಸ್‌ಐಟಿ ಅಧಿಕಾರಿಗಳು, ಗುರುವಾರ ಸಂಜೆಯಿಂದಲೇ ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದರು.