ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಂಡೆಕ್ಟರ್ ಪಾತ್ರವನ್ನು ನಿಭಾಯಿಸಿ ಗಮನ ಸೆಳೆದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದರು.
ಸಿದ್ದರಾಮಯ್ಯ ಅವರು ಲತಾ ಅವರಿಗೆ ಟಿಕೆಟ್ ವಿತರಸಿ ಸನ್ಮಾನಿಸಿದರು. ಈ ವೇಳೆ ಬಸ್ ನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಣೆ ಮಾಡಲಾಯಿತು. ಇದೇ ವೇಳೆ ಶಕ್ತಿ ಯೋಜನೆಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು.
ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ. ಶಕ್ತಿ ರಾಜ್ಯದ ಲಕ್ಷಾಂತರ ಮಹಿಳೆಯರ ಕನಸುಗಳನ್ನು ನನಸಾಗಿಸಿ, ನಿಜಾರ್ಥದಲ್ಲಿ ಅವರ ಬದುಕಿಗೆ ಶಕ್ತಿ ತುಂಬಿದೆ ಎಂದು ಹೇಳಿದರು.
5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು, ಈ ಯೋಜನೆಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) - ನಾಲ್ಕು ಬಸ್ ನಿಗಮಗಳಲ್ಲಿ 497.79 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ ಟಿಕೆಟ್ಗಳ ಮೌಲ್ಯ ಅಂದಾಜು 12,600 ಕೋಟಿ ರೂಪಾಯಿಗಳಾಗಿದೆ. ಪ್ರತಿ ದಿನ ಅಂದಾಜು 80 ಲಕ್ಷಕ್ಕೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ.