ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.
ಕೃಷಿ ಖಾತೆ ರಾಜ್ಯ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಈ ಬಗ್ಗೆ ಅಮಿತ್ ಶಾಗೆ ಪತ್ರ ಬರೆದಿದ್ದು, ವಾಲ್ಮೀಕಿ ಹಗರಣದ ಕುರಿತಾಗಿ ಸಿಬಿಐ ಮೂಲಕ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಅಮಿತ್ ಶಾಗೆ ಬರೆದ ಪತ್ರದಲ್ಲಿ ವಾಲ್ಮೀಕಿ ಹಗರಣ ವಿಚಾರದಲ್ಲಿ ಇದುವರೆಗೆ ನಡೆದ ಎಲ್ಲಾ ವಿಚಾರಗಳನ್ನು ವಿವರವಾಗಿ ಬರೆದಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ, ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಮತ್ತು ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಪಾತ್ರದ ಬಗ್ಗೆ ಸಮಗ್ರವಾಗಿ ಸಿಬಿಐ ತನಿಖೆ ನಡೆಸಬೇಕು ಎಂದು ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಈಗಾಗಲೇ ಒತ್ತಾಯಿಸಿತ್ತು. ಆದರೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದಿತ್ತು.
ವಾಲ್ಮೀಕಿ ಹಗರಣದ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಪ್ರಕರಣದಲ್ಲಿ ಸಚಿವ ನಾಗೇಂದ್ರ ತಲೆದಂಡವಾಗಿತ್ತು. ನಾಗೇಂದ್ರ ನಿವಾಸಕ್ಕೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಅವ್ಯವಹಾರದ ಬಗ್ಗೆ ಸಾಕ್ಷ್ಯ ಕಲೆ ಹಾಕಿದ್ದರು.
ವಾಲ್ಮೀಕಿ ಹಗರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳ ವಿರುದ್ಧ ಸಿಬಿಐ ಸ್ವತಂತ್ರ ತನಿಖೆ ನಡೆಸಲು ನಿರ್ದೇಶನ ನೀಡಬೇಕು, ಹಗರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅಮಾಯಕ ಚಂದ್ರಶೇಖರ್ ಗೆ ನ್ಯಾಯ ನೀಡಬೇಕು ಮತ್ತು ಯೂನಿಯನ್ ಬ್ಯಾಂಕ್ ನ ಹಣಕಾಸಿನ ವ್ಯವಹಾರದ ಬಗ್ಗೆ ನಿಗಾ ವಹಿಸಬೇಕು ಎಂದು ಶೋಭಾ ಗೃಹಸಚಿವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.