ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಗೆ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ನಾನೇ ಸಿಎಂ ಎಂದು ಗುಡುಗಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಜೋರಾಗಿ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿ ಎರಡೂವರೆ ವರ್ಷವಾಗಿದೆ. ಇನ್ನೀಗ ಡಿಕೆ ಶಿವಕುಮಾರ್ ಗೆ ಪಟ್ಟ ಬಿಟ್ಟುಕೊಡಲಿ ಎಂದು ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.
ಇದರ ನಡುವೆಯೇ ಇಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿದ್ದಾರೆ. ಇದಕ್ಕೆ ಮುನ್ನ ಸುದ್ದಿಗೋಷ್ಠಿ ನಡೆಸಿದ ಸಿಎಂ ಐದು ವರ್ಷಗಳಿಗೂ ನಾನೇ ಸಿಎಂ ಎನ್ನುವ ಮೂಲಕ ಹೈಕಮಾಂಡ್ ನಾಯಕರಿಗೆ ಮತ್ತು ಡಿಕೆಶಿಗೆ ಪರೋಕ್ಷ ಎಚ್ಚರಿಕೆ ಕೊಟ್ಟಿದ್ದಾರೆ.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಕಾಂಕ್ಷಿ ಎಂದು ನನಗೆ ಗೊತ್ತು. ಅವರೂ ಈಗ ನನ್ನ ಜೊತೆಗಿದ್ದಾರೆ. ಕೆಲವು ಶಾಸಕರು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮದು ಹೈಕಮಾಂಡ್ ನಿರ್ದೇಶನದ ಅನುಸಾರ ನಡೆಯುವ ಪಕ್ಷ. ಹೀಗಾಗಿ ಹೈಕಮಾಂಡ್ ಏನು ಹೇಳುತ್ತದೋ ಅದನ್ನು ನಾನು ಮತ್ತು ಡಿಕೆ ಶಿವಕುಮಾರ್ ಪಾಲಿಸಬೇಕಾಗುತ್ತದೆ ಎಂದಿದ್ದಾರೆ.