ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿ ಮಾಡಿದ್ದೇ ಸಿಎಂ ಸಿದ್ದರಾಮಯ್ಯ ಸರ್ಕಾರ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಶನಿವಾರ ಗುಣಗಾನ ಮಾಡಿದರು.
ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ₹ 2,578 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
'ಇದು ಯಾರದೋ ಅಸ್ತಿತ್ವಕ್ಕೆ, ಸವಾಲಿಗೆ ಮಾಡುತ್ತಿರುವ ಕಾರ್ಯಕ್ರಮವಲ್ಲ, ಅಭಿವೃದ್ಧಿಯ ಸಭೆ. ತಮ್ಮ ಅಧಿಕಾರದ ಅವಧಿಯಲ್ಲಿ ನುಡಿದಂತೆ ಕೆಲಸ ಮಾಡದವರು ಈ ಕಾರ್ಯಕ್ರಮದ ಬಗ್ಗೆ ಟೀಕೆ ಮಾಡಿದ್ದಾರೆ. ಆದರೆ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರ ಎಂದರು.
ಇಲ್ಲಿ ಜಿಲ್ಲಾ ಆಸ್ಪತ್ರೆ, ಜಯದೇವ ಮೊದಲಾದ ಆಸ್ಪತ್ರೆಗಳನ್ನು ಸ್ಥಾಪಿಸಿದ್ದು, ಈಗ ನಿಮಾನ್ಸ್ ಘಟಕ, ಯುರಾಲಜಿ ಆಸ್ಪತ್ರೆ ಸಹಿತ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಹೊಸ ಬಸ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.