ಇಂತಹ ಭಂಡ ಸರಕಾರವನ್ನು ನೋಡಿಲ್ಲ: ಶೆಟ್ಟರ್

ಸೋಮವಾರ, 11 ಜುಲೈ 2016 (13:58 IST)
ನನ್ನ ರಾಜಕೀಯ ಜೀವನದಲ್ಲಿ ಇಂತಹ ಭಂಡ ಸರಕಾರವನ್ನು ನೋಡಿಲ್ಲ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸರಕಾರ ನೀಡಿರುವ ಉತ್ತರದಲ್ಲಿ ಸ್ಪಷ್ಟತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತರಾತುರಿಯಲ್ಲಿ ಉತ್ತರ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಕೊಲೆಗಡುಕರ ಸರಕಾರವಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಭಂಡ ಸರಕಾರವನ್ನು ನೋಡಿಲ್ಲ ಎಂದು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಮುಚ್ಚಿ ಹಾಕಲು ಯತ್ನಿಸುತ್ತಿದೆ, ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹೆಸರು ಕೇಳಿಬಂದಿದ್ದು, ಸರಕಾರ ಅವರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕೈಬಿಡಲು ಹಿಂದೇಟು ಹಾಕುತ್ತಿದ್ದಾರೆ. ಕೆ.ಜೆ.ಜಾರ್ಜ್ ಇಲ್ಲದೆ ರಾಜ್ಯ ಸರಕಾರ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಕಾಣಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಖುರ್ಚಿ ಬಿಟ್ಟು ಕೊಡುತ್ತಾರೆ. ಆದರೆ, ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ವೆಬ್ದುನಿಯಾವನ್ನು ಓದಿ