ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಸಿದ್ದರಾಮಯ್ಯ, ಡಿಕೆಶಿ ಪೊಲೀಸ್‌ ವಶಕ್ಕೆ

ಗುರುವಾರ, 16 ಜೂನ್ 2022 (14:50 IST)
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ರಾಜಭವನ ಚಲೋ ನಡೆಸಿದ ಕಾಂಗ್ರೆಸ್‌ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಮೂಲಕ ಮುತ್ತಿಗೆ ಹಾಕಲು ಯತ್ನಿಸಿದಾಗ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಪೊಲೀಸರು ಬ್ಯಾರಿಕೇಡ್ ಹಾಕಿ ಕ್ವೀನ್ಸ್ ರಸ್ತೆಯನ್ನು ಬಂದ್ ಮಾಡಿದ್ದು, ಪ್ರತಿಭಟನಾಕಾರರನ್ನು ತುಂಬಲು ಕ್ವೀನ್ಸ್ ರಸ್ತೆಯಲ್ಲಿ ಬಿಎಂಟಿಸಿ ಬಸ್ಸನ್ನು ಪೊಲೀಸರು ಅಡ್ಡ ಹಾಕಿದ್ದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್​​​​ಪ್ರೆಸ್​​ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ.
ಪ್ರತಿಭಟನೆ ವೇಳೆ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್, ಪರಮೇಶ್ವರ್, ಶಾಸಕ ರಿಜ್ವಾನ್ ಹರ್ಷದ್, ಮಾಜಿ ಸಚಿವ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಪರಮೇಶ್ವರ್ ನಾಯಕ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ