ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆ ಕಳೆದ ವರ್ಷವೇ ಜಾರಿಗೆ ಬಂದಿರುವ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಇಂದಿನಿಂದಲೇ ಕಟ್ಟುನಿಟ್ಟಾಗಿ ಆಚರಣೆಗೆ ತರಲು ಬಿಬಿಎಂಪಿ ತೀರ್ಮಾನಿಸಿದೆ. ವಾರದ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ವಿಭಾಗದ ಸಭೆ ನಡೆದಿದ್ದು, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಮತ್ತು 10 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಸಹ ಈ ಆದೇಶ ಜಾರಿಗೆ ಬಂದಿದ್ದು, ಕಟ್ಟುನಿಟ್ಟಾಗಿ ಆಚರಣೆಗೆ ಬಂದಿರಲಿಲ್ಲ. ಇದೀಗ ಜುಲೈ 1ರಿಂದಲೇ ಈ ಆದೇಶವನ್ನು ಬಿಬಿಎಂಪಿಯ ಎಲ್ಲಾ ಎಂಟು ವಲಯಗಳಲ್ಲಿಯೂ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ತಿಳಿಸಿದ್ದಾರೆ.