ಸಿಲಿಕಾನ್‌ ವ್ಯಾಲಿ ರೂವಾರಿ ಎಸ್‌.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ನೀಡಲು ಆರ್.ಅಶೋಕ್ ಮನವಿ

Sampriya

ಬುಧವಾರ, 11 ಡಿಸೆಂಬರ್ 2024 (15:52 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ   ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಆರ್.ಅಶೋಕ್, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ