ಸ್ಟೀಲ್ ಬ್ರಿಡ್ಜ್ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ರಾಜಕೀಯ: ದೇವೇಗೌಡ

ಬುಧವಾರ, 26 ಅಕ್ಟೋಬರ್ 2016 (14:05 IST)
ಸ್ಟೀಲ್ ಬ್ರಿಡ್ಜ್ ವಿಚಾರದಲ್ಲಿ ತಲೆ ತೂರಿಸುವುದಿಲ್ಲ. ಚುನಾವಣೆ ವಿಚಾರದಲ್ಲಿ ವಂತಿಗೆ ನೀಡುವುದು ನನಗೆ ತಿಳಿದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದರು.
 
ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟೀಲ್ ಬ್ರಿಡ್ಜ್ ನಿರ್ಮಾಣ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ವಿಷಯದಲ್ಲಿ ಜೆಡಿಎಸ್ ತಲೆ ತೂರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
 
ಕಾವೇರಿ ಕಣಿವೆ, ಮಹಾದಾಯಿ ಸೇರಿದಂತೆ ರಾಜ್ಯದಾದ್ಯಂತ ರೈತರು ಬರಗಾಲದಿಂದ ತತ್ತರಿಸಿದ್ದರೂ ಸರಕಾರ ರೈತರಿಗೆ ಪರಿಹಾರ ನೀಡಲು ಮುಂದಾಗದೇ, ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದರು
 
ರೈತರು ನಿರಂತರವಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದಾಗ್ಯೂ ಸರಕಾರಕ್ಕೆ ರೈತರ ಪರ ಕಾಳಜಿಯಿಲ್ಲ. ಹಲವರ ಜಮೀನು ವಶಪಡಿಸಿಕೊಂಡ ಬಿಡಿಎ ಸಂತ್ರಸ್ಥರಿಗೆ ಪರಿಹಾರ ನೀಡದೆ ಸತಾಯಿಸುತ್ತಿದೆ.ಸಂತ್ರಸ್ಥರಿಗೆ ಪರಿಹಾರ ನೀಡಲು ಹಣವಿಲ್ಲ ಎನ್ನುವ ಬಿಡಿಎ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿ ಅದು ಹೇಗೆ  ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುತ್ತದೆ ಎಂದು ಪ್ರಶ್ನಿಸಿದರು. 
 
23 ವರ್ಷ ಇತಿಹಾಸ ಹೊಂದಿರುವ ಸಮಾಜವಾದಿ ಪಕ್ಷದಲ್ಲಿ ಆಂತರಿಕ ಕಲಹ ಇರುವುದು ನಿಜ. ಈ ಕುರಿತು ನಿನ್ನೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿರುವ ಅಖಿಲೇಶ್ ಯಾದವ್ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದೇನೆ. ಸದ್ಯದಲ್ಲಿ ಆಂತರಿಕ ಬಿಕ್ಕಟ್ಟು ಶಮನವಾಗಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ