ಕುಡಿಯುವ ನೀರು ಪೂರೈಕೆಗೆ ಕಟ್ಟು ನಿಟ್ಟಿನ ಸೂಚನೆ

ಗುರುವಾರ, 23 ಫೆಬ್ರವರಿ 2017 (22:37 IST)
ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಖಾಸಗಿ ವಿಮಾನ ನಿಲ್ದಾಣಕ್ಕೆ ರಾಯಚೂರು ಜಿಲ್ಲೆಗೆ ತೆರಳುವ ಸಲುವಾಗಿ ವಿಶೇಷ ವಿಮಾನ ಮೂಲಕ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
 
ನೀರು ಪೂರೈಕೆಗೆ ಸೂಚನೆ: ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಎದುರಿಸಲು ನಮ್ಮ ಸರ್ಕಾರ ಸಜ್ಜಾಗಿದೆ. ಈಗಾಗಲೆ ಜಾನುವಾರುಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಮೇವು ಬ್ಯಾಂಕ್, ಗೋಶಾಲೆಗಳನ್ನು ತೆರೆಯಲಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇತ್ತೀಚೆಗೆ ಸಭೆ ಕೈಗೊಂಡು, ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ, ಕೂಡಲೆ ನೀರು ಒದಗಿಸಬೇಕು ಎಂದಿದ್ದಾರೆ.
 
ನೀರಿನ ಮೂಲ ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಟ್ಯಾಂಕರ್ ಮೂಲಕ ನೀರು, ಖಾಸಗಿ ಬೋರ್‍ ವೆಲ್ ಬಾಡಿಗೆಗೆ ಪಡೆದು, ನೀರು ಪೂರೈಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಷ್ಟೇ ಅನುದಾನ ಖರ್ಚಾದರೂ ಪರವಾಗಿಲ್ಲ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸೂಚನೆ ನೀಡಲಾಗಿದೆ. ಬರಗಾಲದ ಕುರಿತು ಈಗಾಗಲೆ ಅಧಿವೇಶನದಲ್ಲಿಯೂ ಸಹ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ