ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ಗಂಭೀರವಾದ ಆರೋಪ ಪ್ರಕರಣವಾಗಿರುವುದರಿಂದ ಕೂಲಂಕಷವಾಗಿ ತನಿಖೆ ಮಾಡುತ್ತೇವೆ. ಸೂರಜ್ ರೇವಣ್ಣ ದಾಖಲಿಸಿರುವ ರಿಟರ್ನ್ ದೂರಿನ ಬಗ್ಗೆ ಸಹ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದರು.
ಪ್ರಕರಣ ಸಂಬಂಧ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಸೂರಜ್‌ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಿ.ಪಿ, ಶುಗರ್ ಮತ್ತು ಇತರ ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಹಾಸನದ ಸೆನ್ ಪೊಲೀಸ್ ಠಾಣೆಗೆ ಕರೆತರಲಾಗಿದೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಹಾಸನದಲ್ಲಿ ಸೂರಜ್‌ನನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಸೂರಜ್ ರೇವಣ್ಣ ಸಾಕ್ಷಿ ನೀಡಲು ಠಾಣೆಗೆ ಬಂದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.