ಚುನಾವಣೆಗೂ ಮುನ್ನವೇ ಮೋದಿಗೆ ಮೊದಲ ಜಯ ತಂದುಕೊಟ್ಟ ಸೂರತ್

Sampriya

ಸೋಮವಾರ, 22 ಏಪ್ರಿಲ್ 2024 (17:04 IST)
Photo Courtesy X
ಸೂರತ್:  ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತವಾಗಿ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ  ಬಿಜೆಪಿ ಪಕ್ಷಕ್ಕೆ ಮೊದಲ ಜಯ ಸಿಕ್ಕಿದೆ.

ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಎಕ್ಸ್‌ ಖಾತೆಯಲ್ಲಿ ಈ ವಿಷಯವನ್ನು ಬಿಜೆಪಿ ಪಕ್ಷದ ಗುಜರಾತ್ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಕಮಲವನ್ನು ಉಡುಗೊರೆಯಾಗಿ ಸೂರತ್ ನೀಡಿದೆ. ಅವಿರೋಧವಾಗಿ ಆಯ್ಕೆಯಾದ ನಮ್ಮ ಪಕ್ಷದ ಅಭ್ಯರ್ಥಿ ಮುಕೇಶ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿದರೆ, 8 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರೆಲ್ಲರೂ ತಮ್ಮ ನಾಮಪತ್ರ ಹಿಂಪಡೆದ ಹಿನ್ನೆಲೆ ಇದೀಗ ಮುಖೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ