ಇಂದು ತೆಲಂಗಾಣ ಸಿಎಂ ಕೆಸಿಆರ್-ದೇವೇಗೌಡ ಚರ್ಚೆ

ಗುರುವಾರ, 26 ಮೇ 2022 (11:50 IST)
ಬೆಂಗಳೂರು : ರಾಷ್ಟ್ರಪತಿ ಆಯ್ಕೆ, ಪ್ರಸಕ್ತ ರಾಜಕೀಯ ವಿದ್ಯಮಾನ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ತೃತೀಯ ರಂಗ ಬಲಪಡಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರು ಗುರುವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಲಿದ್ದಾರೆ.

ಕಳೆದ ಶನಿವಾರ ಉತ್ತರ ಪ್ರದೇಶಕ್ಕೆ ತೆರಳಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದ ಚಂದ್ರಶೇಖರ್ ರಾವ್ ಅವರು ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಕಂಡು ತೃತೀಯ ರಂಗ ರಚನೆ ಸಂಬಂಧ ಮಾತುಕತೆ ನಡೆಸಿದ್ದರು.

ಗುರುವಾರ ರಾಜ್ಯಕ್ಕೆ ಆಗಮಿಸುತ್ತಿರುವ ಚಂದ್ರಶೇಖರ್ ರಾವ್ ಅವರು ಮಧ್ಯಾಹ್ನ 12.30ಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಉಪಸ್ಥಿತರಿರುವರು.

ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವುದು, ರಾಷ್ಟ್ರಪತಿ ಚುನಾವಣೆ ವೇಳೆ ಪ್ರಾದೇಶಿಕ ಪಕ್ಷಗಳೆಲ್ಲಾ ಸೇರಿ ಒಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಉಭಯ ನಾಯಕರು ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ