ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಆರೋಪಿಗೆ ಜೀವಾವಧಿ ಕಠಿಣ ಶಿಕ್ಷೆ
ಗುರುವಾರ, 13 ಡಿಸೆಂಬರ್ 2018 (19:17 IST)
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಜೀವಾವಧಿ ಕಠಿಣ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಕಲಬುರಗಿ ಜಿಲ್ಲೆಯ ಮಾದನಹಿಪ್ಪರಗಾ ಪೊಲೀಸ್ ಠಾಣೆ ವ್ಯಾಪ್ತಿಯ ಇಕ್ಕಳಕಿ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ನೆರೆಯ ಮಹಾರಾಷ್ಟ್ರ ರಾಜ್ಯದ ದುಧನಿ, ಸೋಲಾಪೂರಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಅತ್ಯಾಚಾರವೆಸಗಿದ ಆರೋಪಿ ಬಸವರಾಜ @ ಬಸಂತರಾಯ ಪುರಾಣೆ ಎಂಬಾತನನ್ನು ವಿವಿಧ ಕಲಂನಡಿ ಕಠಿಣ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಕಲಬುರಗಿ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಪ್ಪ ಎಸ್. ತೀರ್ಪು ನೀಡಿದ್ದಾರೆ.
ಇಕ್ಕಳಕಿ ಗ್ರಾಮದ ನಿವಾಸಿಯಾಗಿರುವ ಆರೋಪಿ ಬಸವರಾಜ @ ಬಸಂತರಾಯ ಪುರಾಣೆ 2015ರ ನವೆಂಬರ್ 22ರ ರಾತ್ರಿ ಅದೇ ಗ್ರಾಮದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿದ್ದನು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಕಲಬುರಗಿ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಪ್ಪ ಎಸ್. ಅವರು ವಾದ ಪ್ರತಿವಾದವನ್ನು ಕೂಲಂಕುಷವಾಗಿ ಆಲಿಸಿ ಆರೋಪಿತ ಎಸಗಿರುವ ಅಪರಾಧ ರುಜುವಾತಾಗಿರುವ ಹಿನ್ನೆಲೆಯಲ್ಲಿ ಐ.ಪಿ.ಸಿ. ಕಲಂ 366(ಎ) ಅಡಿಯಲ್ಲಿನ ಅಪರಾಧಕ್ಕೆ 10 ವರ್ಷ ಕಠಿಣ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ಮತ್ತು ಐ.ಪಿ.ಸಿ. ಕಲಂ 376(2)(ಐ) ಹಾಗೂ ಪೋಕ್ಸೋ ಕಾಯ್ದೆ ಕಲಂ 4 ಅಡಿಯಲ್ಲಿನ ಅಪರಾಧಕ್ಕೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಈ ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರಲಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಲಾಗಿದೆ. ಒಂದು ವೇಳೆ ಆರೋಪಿ ದಂಡದ ಹಣ ಸಂದಾಯ ಮಾಡಿದಲ್ಲಿ ಬಾಲಕಿಗೆ ಹೆಚ್ಚುವರಿಯಾಗಿ 1.50 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.