ರೈತರ ಮೇಲಿನ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧ ಎಂದ ಸಚಿವ
ರೈತರ ಮೇಲಿರುವ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ವಿವಿಧ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲ ಪಡೆದ ಒಟ್ಟು 2.21 ಲಕ್ಷ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಸುಮಾರು 447 ಕೋಟಿ ರೂ.ಗಿಂತ ಹೆಚ್ಚು ಅನುದಾನವನ್ನು ಸಂಬಂಧಪಟ್ಟ ಬ್ಯಾಂಕುಗಳಿಗೆ ಮರು ಪಾವತಿಗಾಗಿ ಜಮಾ ಮಾಡಿದೆ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕಲಬುರಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭಾರತದ 70ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಹಾಗೂ ವಿವಿಧ ಪಡೆಗಳಿಂದ ವಂದನೆ ಸ್ವೀಕರಿಸಿ ಮಾತನಾಡಿದರು.
ರಾಜ್ಯದ ಸಮ್ಮಿಶ್ರ ಸರ್ಕಾರ ಈ ಹಿಂದಿನ ಯಶಸ್ವಿ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಬರುತ್ತಿದೆ. ಜನಪರ ಹಾಗೂ ಬಡವರ ಯೋಜನೆಗಳಾದ ಅನ್ನಭಾಗ್ಯ, ಕೃಷಿ ಭಾಗ್ಯ ಸೇರಿದಂತೆ ಹಲವಾರು ಯೋಜನೆಗಳಿಗೆ ಮತ್ತಷ್ಟು ಒತ್ತು ನೀಡಲಾಗಿದೆ. ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದ 3500 ವಿದ್ಯಾರ್ಥಿ ನಿಲಯಗಳು ಹಾಗೂ 800 ವಸತಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸಮಗ್ರ ಅಭಿವೃದ್ದಿ ಮಾಡಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.