ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ; ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಿಜೆಪಿ ಯತ್ನ ಎಂದ ಸಿಎಂ

Sampriya

ಶುಕ್ರವಾರ, 26 ಜುಲೈ 2024 (14:11 IST)
ಬೆಂಗಳೂರು: ಮುಡಾದಿಂದ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಜಿಲ್ಲೆಯ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ ನನ್ನ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಒತ್ತುವರಿ ಮಾಡಿಕೊಂಡು ಬಡಾವಣೆ ನಿರ್ಮಿಸಿತ್ತು. ಅದಕ್ಕೆ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ ಮಾಡಿದೆ. ಇದರಲ್ಲಿ ಅಕ್ರಮ ಏನಿದೆ ಎಂದು ಹೇಳಿದರು.

ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನಿನ ಸ್ವಾಧೀನಕ್ಕೆ ಮುಡಾ 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಮತ್ತು 1997ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಜಮೀನು ಮಾಲೀಕರ ಮನವಿಯಂತೆ ಸದರಿ‌ ಜಮೀನನ್ನು ಡಿನೋಟಿಫೈ ಮಾಡಿ 1997ರಲ್ಲಿ ಆದೇಶ ಹೊರಡಿಸಲಾಗಿತ್ತು ಎಂದು ದಾಖಲೆ ಪ್ರದರ್ಶಿಸಿದರು.

ಪತ್ನಿಯ ಹೆಸರಿನಲ್ಲಿದ್ದ ಜಮೀನನ್ನು ಮುಡಾ ಒತ್ತುವರಿ ಮಾಡಿರುವುದು 2013ರಲ್ಲಿ ನಮ್ಮ ಕುಟುಂಬಕ್ಕೆ ಗೊತ್ತಾಯಿತು. ಬಳಿಕ ಬದಲಿ ಜಮೀನು ಕೊಡುವಂತೆ ಪಾರ್ವತಿ ಮುಡಾಕ್ಕೆ ಅರ್ಜಿ ಸಲ್ಲಿಸಿದ್ದರು‌. 2014 ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನ ಕೋರಿರುವ ವಿಷಯವನ್ನು ಪತ್ನಿ ತಿಳಿಸಿದ್ದರು. ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದಿದ್ದೆ. ಸದರಿ ಕಡತದ ಬಗ್ಗೆ ನನ್ನ ಬಳಿ ಚರ್ಚಿಸದಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದೆ ಎಂದು ಹೇಳಿದರು.

ಬದಲಿ ನಿವೇಶನ ಹಂಚಿಕೆ ಮಾಡಿರುವುದು ಬಿಜೆಪಿ ಆಡಳಿತದ ಅವಧಿಯಲ್ಲಿ. ಬಿಜೆಪಿ ಶಾಸಕರಾಗಿದ್ದ ಎಸ್.ಎ. ರಾಮದಾಸ್, ನಾಗೇಂದ್ರ, ಜೆಡಿಎಸ್ ಶಾಸಕರಾಗಿದ್ದ ಜಿ.ಟಿ. ದೇವೇಗೌಡ ಉಪಸ್ಥಿತರಿದ್ದ ಮುಡಾ ಆಡಳಿತ ಮಂಡಳಿ ಸಭೆಯಲ್ಲಿ ನಿವೇಶನ ಹಂಚಿಕೆ ನಿರ್ಣಯ ಕೈಗೊಳ್ಳಲಾಗಿತ್ತು ಎಂದರು.

ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಹತಾಶರಾಗಿದ್ದಾರೆ. ಆ ಕಾರಣದಿಂದ ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ