ವಿದ್ಯುತ್ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ
ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು, ಇಂತಹ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್ಗೆ ಬೆಸ್ಕಾಂ ವಿದ್ಯುತ್ ಶುಲ್ಕವನ್ನು ಸಂಗ್ರಹಿಸುತ್ತಿದ್ದು, ಬಿಲ್ ವಿತರಿಸಿದ ದಿನದಿಂದ ಅದರ ಪಾವತಿಗೆ 15 ದಿನಗಳ ಕಾಲಾವಕಾಶವಿರುತ್ತದೆ. ಜೊತೆಗೆ ಗ್ರಾಹಕರಿಗೆ ನೀಡುವ ಮಾಸಿಕ ಬಿಲ್ನ ಹಿಂಬದಿ ಸೂಚನೆ 1 ರಲ್ಲಿ ಬಿಲ್ ಪಾವತಿಸಲು ಅಂತಿಮ ಗಡವು, ಬಿಲ್ ವಿತರಿಸಿದ ದಿನದಿಂದ 15 ದಿನಗಳ ಅವಧಿಯಾಗಿರುತ್ತದೆ ಎಂದು ನಮೂದಿಸಲಾಗಿದೆ. ಗ್ರಾಹಕರು ನಿಗದಿತ ಅವಧಿಯೊಳಗೆ ಹಣ ಪಾವತಿ ಮಾಡದಿದ್ದಲ್ಲಿ ಗಡುವು ದಿನಾಂಕದ ನಂತರ 15 ದಿನಗಳ ಕಾಲಾವಧಿಯ ನೋಟಿಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಅಧಿಕಾರವನ್ನು ಬೆಸ್ಕಾಂ ಹೊಂದಿರುತ್ತದೆ ಎಂದು ಬೆಸ್ಕಾಂನ ನಿರ್ದೇಶಕರು ತಿಳಿಸಿದ್ದಾರೆ.