ಈ ನದಿ ತೀರದ ಜನರಿಗೆ ಕಾದಿದೆ ಅಪಾಯ

ಶನಿವಾರ, 13 ಜೂನ್ 2020 (15:15 IST)
ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಒಳಹರಿವು ಪ್ರಮಾಣ ದಾಖಲಾಗುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಉತ್ತರಕನ್ನಡ ಜಿಲ್ಲೆಯ ಕದ್ರಾ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚುತ್ತಿರುವುದರಿಂದ ಆಣೆಕಟ್ಟಿನ ಕೆಳದಂಡೆ ಹಾಗೂ ಕಾಳಿ ನದಿಯ ದಂಡೆಯ ಪಾತ್ರದಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕದ್ರಾ ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಸೂಚಿಸಿದ್ದಾರೆ.

ಕಾಳಿನದಿಯ ಎರಡನೇಯ ಹಂತದ ಕದ್ರಾ ಆಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮುಂಗಾರು ಆರಂಭವಾಗಿದೆ. ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ ಇದ್ದು, ಈಗಿನ ಜಲಾಶಯದ ಮಟ್ಟ 30.15 ಮೀ. ಇದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರಿದಲ್ಲಿ ಕದ್ರಾ ಜಲಾಶಯ 32.50 ಮೀ. ಮಟ್ಟ ಶೀಘ್ರವೇ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.

ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಕದ್ರಾ ಆಣೆಕಟ್ಟೆಯ ಕೆಳಭಾಗದ ನದಿಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ನಡೆಸಬಾರದು ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ