ಬೆಂಗಳೂರು: 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಾಳೆಯಿಂದ, ಅಂದರೆ; ಅಗಸ್ಟ್ 28- 29 ಮತ್ತು 30ರಂದು ರಾಜ್ಯದಲ್ಲೆಡೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಎಲ್ಲ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದರು.
ಈ ಸಂಬಂಧ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು, ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಸರಕಾರಿ ಪಿಯು ಕಾಲೇಜಿಗೆ ತೆರಳಿ ಪರೀಕ್ಷಾ ಸಿದ್ಧತೆಗಳನ್ನು ನೇರವಾಗಿ ವೀಕ್ಷಿಸಿದರು.
ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆಯೇ ಸಿಇಟಿ ನಡೆಯುತ್ತಿದ್ದು, ಸರಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆಗಳನ್ನು ಸಚಿವರು ಪರಿಶೀಲನೆ ಮಾಡಿದರು.
ಬಳಿಕ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಡಾ.ಅಶ್ವತ್ಥನಾರಾಯಣ ಅವರು, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ನಡೆಯುತ್ತಿದ್ದು, ಕೋವಿಡ್ ಒತ್ತಡವನ್ನು ಮನಸ್ಸಿನಿಂದ ತೆಗೆದು ಹಾಕಿ ವಿದ್ಯಾರ್ಥಿಗಳು ಧೈರ್ಯ, ಸಂತೋಷದಿಂದ ಬರೆಯಬೇಕು. ಇದನ್ನು ನಾನು ʼಸಿಇಟಿ ಪರೀಕ್ಷೋತ್ಸವʼ ಎಂದು ಕರೆಯಲು ಬಯಸುತ್ತೇನೆ ಎಂದರು.
ಮಹತ್ವದ ಅಂಶವೆಂದರೆ, ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು. ಸಿಇಟಿ ಅಂಕದ ಆಧಾರದ ಮೇಲೆಯೇ Rank ನಿರ್ಧಾರ ಮಾಡಲಾಗುವುದು ಎಂದು ಸಚಿವರು ಪ್ರಕಟಿಸಿದರು.
ಸಚಿವರು ಹೇಳಿದ್ದಿಷ್ಟು;
ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲೇ ಇವೆ. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಿವೆ. ಹೊರನಾಡು & ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಈ ಕೇಂದ್ರಗಳಲ್ಲಿ 1682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ ಹಾಗೂ ಪ್ರತಿ ಒಂದು ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ಹಾಗೂ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ವಹಿಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ 100 ಮಾಸ್ಕ್ʼಗಳನ್ನು ಸ್ವಯಂ ಸೇವಾ ಸಂಸ್ಥೆಯಿಂದ ಪರೀಕ್ಷೆ ನಡೆಯುವ ಎರಡು ದಿನಗಳಂದು ಪರೀಕ್ಷಾ ಕೇಂದ್ರಕ್ಕೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೇರಳ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಲಾಗಿದೆ.
ಉಳಿದಂತೆ ಪರೀಕ್ಷೆಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.
ಪರೀಕ್ಷೆ ವೇಳಾಪಟ್ಟಿ ಹೀಗಿದೆ:
28ರಂದು ಶನಿವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತದ ಪರೀಕ್ಷೆ ಇರುತ್ತದೆ.
29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
30ರಂದು ಭಾನುವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ.
ಅಭ್ಯರ್ಥಿಗಳು http://kea.kar.nic.in ನಲ್ಲಿ ತಮ್ಮ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು ಹಾಗೂ ಅದರಲ್ಲಿ ಮುದ್ರಿತವಾಗಿರುವ ಸೂಚನೆಗಳನ್ನು ಪಾಲಿಸಿ, ಅದರಲ್ಲಿ ನಮೂದಿಸಲಾದ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.
ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು/ಉತ್ತರಗಳು ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಮುದ್ರಿತವಾಗಿರುತ್ತವೆ. ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಿಕೊಳ್ಳಬೇಕು.
*
ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ
ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿದ್ದರೆ, ಅಂಥವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಸ್ಒಪಿ ಪ್ರಕಾರ ಅವರಿಗೆ ಪ್ರತಿ ಜಿಲ್ಲೆಯಲ್ಲೂ ಇವರಿಂದ ಪರೀಕ್ಷೆ ಬರೆಸಲಾಗುವುದು. ಯಾರೇ ವಿದ್ಯಾರ್ಥಿಗಳು ಸೋಂಕಿತರಿದ್ದರೆ ಧೈರ್ಯವಾಗಿ ಪರೀಕ್ಷೆ ಬರೆಯಲು ಅವಕಾಶ ಇದೆ. ಅವರಿಗೆ ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಅರೆವೈದ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಭದ್ರತೆಗೆ ಹೆಚ್ಚು ಒತ್ತು
ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆ ಪತ್ರಿಕೆ ಪಾಲಕರು, ಸುಮಾರು 8409 ಕೊಠಡಿ ಮೇಲ್ವಿಚಾರಕರು ಹಾಗೂ ಒಟ್ಟಾರೆ 20415 ಅಧಿಕಾರಿ/ಸಿಬ್ಬಂದಿ ಪರೀಕ್ಷ ಕರ್ತವ್ಯ ನಿರ್ವಹಿಸಲಿದ್ದಾರೆ. ಪರೀಕ್ಷಾ ದಿನಗಳಂದು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ/ಖಜಾನೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
ಆನ್ ಲೈನ್ ಮೂಲಕ ದಾಖಲೆಗಳ ಸಲ್ಲಿಕೆ:
ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆ ಮುಗಿದ ನಂತರದ ದಿನಗಳಲ್ಲಿ ಅಭ್ಯರ್ಥಿಗಳು ಸಿಇಟಿ ಅರ್ಜಿಯಲ್ಲಿ ಕೋರಿರುವ ಮೀಸಲಾತಿಗೆ ಅಗತ್ಯ ದಾಖಲೆಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಹೀಗೆ ಆನ್ ಲೈನ್ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಆನ್ ಲೈನ್ ಮೂಲಕವೇ ಪರಿಶೀಲನೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ʼನಲ್ಲಿ ಪ್ರಕಟಿಸಲಾಗುವುದು.
ಜತೆಗೆ, ವಿಶೇಷ ವರ್ಗದ ಅಭ್ಯರ್ಥಿಗಳಿಗೆ ದಾಖಲಾತಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುವುದು ಎಂದ ಅವರು, ಎಲ್ಲ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲೂ ಸಹ ಅಂತಿಮ ಅವಕಾಶವನ್ನು ನೀಡಲಾಗುತ್ತಿದ್ದು, ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.