ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.
ನಾಳೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಭಾನುವಾರ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗುಡುಗು ಸಹಿತ ಮಳೆಯಾಗಿದೆ. ಇದರಿಂದ ಬಿಸಿಲ ತಾಪದಿಂದ ಸುಸ್ತಾಗಿರುವ ಮಂದಿಗೆ ವರುಣ ತಂಪೆರೆದಿದ್ದಾನೆ. ಏಪ್ರಿಲ್ 15 ಹಾಗೂ 16ರಂದು ರಾಜ್ಯದಾದ್ಯಂತ ಒಣಹವೆ ಇರಲಿದೆ. ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ 22 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.