ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 94.73 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದ ಬಿಸಿ ಏರುತ್ತಿದ್ದ ಹಾಗೇ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಗುರುವಾರ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದರು. ಅದಲ್ಲದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ಇನ್ನೂ ಈ ಪ್ರಕರಣದ ಬಿಸಿ ಜೋರಾಗುತ್ತಿದ್ದ ಹಾಗೇ ಮುಖ್ಯಮಂತ್ರಿ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿದ ನಾಗೇಂದ್ರ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ರಾಜೀನಾಮೆ ನೀಡುವುದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಂದ್ರ, ಇಡೀ
ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಯಾರ ಒತ್ತಡವೂ ಇಲ್ಲದೆ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಲು ನಿರ್ಧರಿಸಿ, ಮುಖ್ಯಮಂತ್ರಿ ಬಳಿ ಸಮಯ ಕೇಳಿದಾಗ ಸಂಜೆ 7.30ಕ್ಕೆ ಬರಲು ಹೇಳಿದರು. ಯಾರಿಗೂ ಮುಜುಗರ ಆಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡೆ ಎಂದರು.