ಬೆಂಗಳೂರು: ಬೆಳಗಾವಿಯ ರಕ್ಷಣೆ, ಎಂಇಎಸ್ ನಿಷೇಧ, ಮಹದಾಯಿ ಯೋಜನೆ ಅನುಷ್ಠಾನ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ ಹೇಳಿದ್ದಾರೆ.
ಮಾರ್ಚ್ 22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಲಾಗುವುದು. ಅಂದು ಬೆಳಗಾವಿಗೆ ಬರುವ ಕುರಿತು ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಶಿವಸೇನಾ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸಬೇಕು ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದವರು ಬೆಳಗಾವಿ ನಗರದಲ್ಲಿ ಸೋಮವಾರ ಪ್ರತಿಭಟನೆ ಆರಂಭಲಾಗಿದೆ. ಈ ಪ್ರತಿಭಟನೆಯ ನೇತೃತ್ವದನ್ನು ವಾಟಾಳ್ ನಾಗರಾಜ ವಹಿಸಿದ್ದಾರೆ.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಬೆಳಗಾವಿಯಲ್ಲಿನ ಮರಾಠಿ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ವಾಟಾಳ್ ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೆ ಕ್ರಮ ಕೈಗೊಳ್ಳಲಿಲ್ಲ. ಶೀಘ್ರವೇ ಎಂಇಎಸ್ ನಿಷೇಧ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.