ಬೆಂಗಳೂರು : ಬಿಜೆಪಿ ಹಳೇ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ.
ತುರುವೇಕೆರೆಯಲ್ಲಿ ರೈತ ಸಮಾವೇಶವಾದರೆ, ಅಲ್ಲಿಗೆ ಜಿಲ್ಲೆಯ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ಮೋರ್ಚಾಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೇಂದ್ರ-ರಾಜ್ಯಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಚುನಾವಣೆ ಪ್ರಕ್ರಿಯೆ ಬಳಿಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಐತಿಹಾಸಿಕ ಗೆಲುವು ಬಿಜೆಪಿಯದ್ದಾಗಲು ನಮ್ಮೆಲ್ಲ ಮೋರ್ಚಾಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಮೋರ್ಚಾ ಸಮಾವೇಶಗಳು ಬಿಜೆಪಿ ಗೆಲುವಿಗೆ ಪೂರಕ ಎಂದು ವಿಶ್ವಾಸ ವ್ಯಕ್ತಪಡಿಸಿದರು.