ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಐವನ್‌ ಡಿಸೋಜಾ ಹೇಳಿಕೆಗೆ ಬಿಜೆಪಿ ಆಕ್ರೋಶ

Sampriya

ಸೋಮವಾರ, 19 ಆಗಸ್ಟ್ 2024 (20:12 IST)
Photo Courtesy X
ಬೆಂಗಳೂರು: ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ‌ ಐವಾನ್‌ ಡಿಸೋಜ ಅವರು ಬಿಚ್ಚಿಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿಟಿ ರವಿ ಆಕ್ರೋಶ ಹೊರಹಾಕಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ವಿರೋಧಿಸಿ ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಈ ವೇಳೆ ಕಾಂಗ್ರೆಸ್‌ ಎಂಎಲ್‌ಸಿ ಐವನ್ ಡಿಸೋಜಾ ಅವರು ಬಾಂಗ್ಲಾದೇಶದ ಪ್ರಧಾನಿಗೆ ಆದ ಗತಿಯೇ ರಾಜ್ಯಪಾಲರಿಗೂ ಆಗುತ್ತದೆ. ನೀವೂ ಕೂಡಾ ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಟಿ ರವಿ ಬರೆದುಕೊಂಡಿದ್ದಾರೆ. ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ‌ ಐವಾನ್‌ ಡಿಸೋಜ ಅವರು ಬಿಚ್ಚಿಟ್ಟಿದ್ದಾರೆ.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು?

ರಾಜಭವನಕ್ಕೆ ಕಾಂಗ್ರೆಸ್‌ ಪುಢಾರಿಗಳನ್ನು ನುಗ್ಗಿಸುತ್ತೀರಾ? ಕಾಂಗ್ರೆಸ್‌ ಶಾಸಕರ ಈ ಹೇಳಿಕೆಗೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಿಸಲಿ.

ಕೂಡಲೇ  ಪೋಲಿಸ್ ಇಲಾಖೆಯ ಮಹಾನಿರ್ದೇಶಕರು ಪರಿಷತ್ ಸದಸ್ಯರಾದ  ಐವಾನ್ ಡಿಸೋಜ ಅವರ ವಿರುದ್ದ ದೂರುನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸುತ್ತೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ