ಬೆಂಗಳೂರು: ಮುಡಾ ಹಗರಣ ಸಂಬಂಧ ನಾನು ಪಾದಯಾತ್ರೆಯಲ್ಲಿ ಭಾಗಿದ್ದು ನಿಜ, ಆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಮುಡಾ ಸಂಬಂಧ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೇಳುವುದು ಇಲ್ಲ ಎಂದರು.
ಅಂದು ಕೂಡ ನಾನು ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲ. ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ನ್ಯಾಯಾಲಯ ಹಾಗೂ ಕಾನೂನು ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ತಪ್ಪು ಮಾಡಿದರೆ ನ್ಯಾಯಾಲಯಗಳು ಏನು ತೀರ್ಮಾನ ಮಾಡಬೇಕೋ ಅದನ್ನು ಮಾಡುತ್ತವೆ ಎಂದು ಕುಮಾರಸ್ವಾಮಿ ಹೇಳಿದರು.
ನನ್ನಿಂದ್ದ ತಪ್ಪು ಆಗದಿದ್ದರೂ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಲು ಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದರು.