ಪ್ರಧಾನಿ ಭೇಟಿ ಮಾಡಿದ ಸಿಎಮ್ ಮಾಡಿದ ಮನವಿ ಏನು?

ಶನಿವಾರ, 9 ಮಾರ್ಚ್ 2019 (16:50 IST)
ಮುಖ್ಯಮಂತ್ರಿ ಹೆಚ್.ಡಿ.  ಕುಮಾರಸ್ವಾಮಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಕೃತಿ ವಿಕೋಪ ಪರಿಹಾರ ಹಾಗೂ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಾಕಿ ಇರುವ ವೇತನ ಮತ್ತು ಸಾಮಗ್ರಿ ವೆಚ್ಚದ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ರಾಜ್ಯವು 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹ,  ಭೂಕುಸಿತ ಪರಿಸ್ಥಿತಿ ಹಾಗೂ ಬರ ಪರಿಸ್ಥಿತಿಗಳೆರಡನ್ನೂ ಎದುರಿಸಿದೆ. ಕೊಡಗು ಮತ್ತು ಸಮೀಪದ ಮಲೆನಾಡು ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಭೂ ಕುಸಿತದಿಂದ ತೀವ್ರ ಹಾನಿ ಸಂಭವಿಸಿದರೆ, ಇತರ ಭಾಗಗಳಲ್ಲಿ ಅಂದರೆ ರಾಜ್ಯದ 100 ತಾಲ್ಲೂಕುಗಳಲ್ಲಿ ಮಳೆಯಿಲ್ಲದೆ ಬರ ಪರಿಸ್ಥಿತಿ ತಲೆದೋರಿತ್ತು. ಇದಕ್ಕೆ ಎಸ್‍ಡಿಆರ್‍ಎಫ್,  ಎನ್‍ಡಿಆರ್‍ಎಫ್ ಮಾರ್ಗಸೂಚಿಗಳ ಪ್ರಕಾರ 2434 ಕೋಟಿ ರೂ. ಪರಿಹಾರ ಒದಗಿಸುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಈ ಮೊತ್ತದ ಕೇವಲ ಶೇ. 50 ಕ್ಕೂ ಕಡಿಮೆ ಅಂದರೆ 949.49 ಕೋಟಿ ರೂ. ಪರಿಹಾರ ಮಂಜೂರು ಮಾಡಿದೆ ಎಂದಿದ್ದಾರೆ.

ಕುಡಿಯುವ ನೀರು, ಮೇವು ಒದಗಿಸುವ ಜೊತೆಗೆ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 8.18 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದೆ. ಇದಕ್ಕಾಗಿ ಬಾಕಿ ಉಳಿದಿರುವ 1351 ಕೋಟಿ ರೂ. ಗಳಷ್ಟು ವೇತನ ಹಾಗೂ ಸಾಮಗ್ರಿ ವೆಚ್ಚದ ಕೇಂದ್ರದ ಪಾಲನ್ನೂ, ಕೇಂದ್ರದಿಂದ ಅನುದಾನ ಬಿಡುಗಡೆಯನ್ನು ನಿರೀಕ್ಷಿಸಿ ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿದೆ. ಆದ್ದರಿಂದ ಈ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ