Karnataka Rains Today:(ಆ.08): ಕರ್ನಾಟಕದಲ್ಲಿ ಕಳೆದ 6-7 ದಿನಗಳಿಂದ ಮತ್ತೆ ಮುಂಗಾರು ಚುರುಕುಗೊಂಡಿದೆ. ಜುಲೈ ನಂತರ ಕೊಂಚ ವಿರಾಮ ನೀಡಿದ್ದ ಮಳೆರಾಯ, ಕಳೆದ ಎರಡು ದಿನಗಳಿಂದ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದಾನೆ. ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.ಆಗಸ್ಟ್ 7ರಂದು ಬೆಂಗಳೂರಿನ ಬೊಮ್ಮನಹಳ್ಳಿಯ ಸಿಂಗಸಂದ್ರದಲ್ಲಿ 13 ಮಿ.ಮೀ. ಮಳೆಯಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ 120 ಮಿ.ಮೀ. ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತ್ಯಧಿಕ ಮಳೆಯಾಗಿರುವ ಪ್ರದೇಶ ಇದಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜುಲೈ ತಿಂಗಳಾಂತ್ಯದಲ್ಲಿ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ, ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್ಫಾರ್ಮರ್ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.