ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಮುಸುಕಿನ ಯುದ್ಧ ಜೋರಾಗಿದ್ದು ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮೇಲಿನ ಸಿಟ್ಟನ್ನು ಇಂದಿನ ಅಹವಾಲು ಸ್ವೀಕರಿಸುವ ಸಭೆ ರದ್ದುಗೊಳಿಸುವ ಮೂಲಕ ತೀರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರಕಟಣೆ ಹೊರಡಿಸಿದ್ದ ಕೆಪಿಸಿಸಿ, ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಹವಾಲು ಸ್ವೀಕರಿಸುವ, 'ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ & ಡಿಸಿಎಂ' ಕಾರ್ಯಕ್ರಮದಲ್ಲಿ ಅನಿವಾರ್ಯ ಕಾರಣಗಳಿಂದಾಗಿ ಸಿಎಂ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.
ಆದರೆ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ಮೊದಲೇ ನಿಗದಿ ಆಗಿರುವಂತೆ ಅಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ, ಅವರ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಲಿದ್ದಾರೆ ಎಂದು ಪ್ರಕಟಣೆ ನೀಡಲಾಗಿತ್ತು.
ಇದನ್ನು ನೋಡಿದರೆ ಸಿಎಂ ಮತ್ತು ಡಿಸಿಎಂ ನಡುವಿನ ಮುಸುಕಿನ ಗುದ್ದಾಟದ ಫಲವಾಗಿಯೇ ಈ ರೀತಿ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂಬ ಗುಸು ಗುಸು ಕೇಳಿಬರುತ್ತಿದೆ. ಸಿದ್ದರಾಮಯ್ಯ ಬಣ ರಾಜ್ಯದಲ್ಲಿ ಕೆಪಿಸಿಸಿ ಮತ್ತು ಡಿಸಿಎಂ ಹುದ್ದೆ ಕುರಿತಾಗಿ ಬಹಿರಂಗ ಹೇಳಿಕೆ ನೀಡಿತ್ತು. ಇದಕ್ಕೆ ಡಿಕೆ ಶಿವಕುಮಾರ್ ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಹೈಕಮಾಂಡ್ ಕೂಡಾ ಡಿಕೆಶಿ ಬೆಂಬಲಕ್ಕೇ ನಿಂತಿದ್ದು ಸಿದ್ದರಾಮಯ್ಯ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ.