ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದ ದೂರುದಾರೆ ಈಗ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಲೋಕಸಭೆ ಚುನಾವಣೆ ಹೊಸ್ತಲಲ್ಲೇ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಾಗಿತ್ತು. ಈ ಸಂಬಂಧ ಆಕೆಯ ತಾಯಿ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್ ಠಾಣಾ ಅಧಿಕಾರಿಗಳು ಎಫ್ಐಆರ್ ಕೂಡಾ ದಾಖಲಿಸಿದ್ದರು.
ಆದರೆ ಇದೀಗ ಅನಾರೋಗ್ಯದಿಂದಾಗಿ ದೂರುದಾರೆ ಮೃತಪಟ್ಟಿದ್ದಾಳೆ. ಬಹಳ ಸಮಯದಿಂದ ಆಕೆ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಳು. ಈ ಸಂಬಂಧ ಆಕೆಯನ್ನು ಬನ್ನೇರುಘಟ್ಟದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಕಳೆದ ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆ ದೂರು ದಾಖಲಿಸಿದ್ದರು.