ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕೆ ಈ ಕೇಸನ್ನು ಬಳಸುವ ಅನುಮಾನ ವ್ಯಕ್ತವಾಗಿದೆ. ಹಾಗಿಲ್ಲದೆ ಇದ್ದರೆ 3 ತಿಂಗಳ ಕಾಲ ಇಲ್ಲದ ಜೀವ ಈಗ ಯಾಕೆ ಬಂತು? ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು? ದೂರುದಾರೆಯು ಈ ಥರ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಮಾನ್ಯ ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಗಮನ ಸೆಳೆದರು. ಮಾನಸಿಕವಾಗಿ ಸ್ವಲ್ಪ.. ಎಂದು ಹೇಳಿಕೆ ನೀಡಿದ್ದರು ಎಂದರು.
ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ದೂರಿಗೆ ಸಂಬಂಧಿಸಿ ಸರಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ವಿವರಿಸಿದರು. ಮಾರ್ಚ್ 14ರಂದು ಅವರ ಮೇಲೆ ದೂರು ದಾಖಲಾಗಿತ್ತು. ಫೆಬ್ರವರಿ 2ರಂದು ಈ ಪ್ರಕರಣ ನಡೆದುದಾಗಿ ಆರೋಪಿಸಲಾಗಿದೆ. ಯಡಿಯೂರಪ್ಪ ಅವರು ಸಿಐಡಿ ಮುಂದೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು ಎಂದು ತಿಳಿಸಿದರು.
ಇದೀಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಇವತ್ತು ಹೈಕೋರ್ಟ್ ಮುಂದೆ ಮೊಕದ್ದಮೆ ಬರಲಿದ್ದು, ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದರು. ಯಡಿಯೂರಪ್ಪ ಅವರ ಮೇಲಿನ ಮೊಕದ್ದಮೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರವು ರಾಜಕೀಯದ ದೃಷ್ಟಿಯಿಂದ ನೋಡುತ್ತಿದೆ ಎಂದು ಆರೋಪಿಸಿದರು.