ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರರು, ತಾಯಂದಿರು ಹಾಗೂ ಮಕ್ಕಳಿಗೆ ತೊಂದರೆಯಾಗಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಷಾದ ವ್ಯಕ್ತಪಡಿಸುವ ಮೂಲಕ ಕ್ಷಮೆಯಾಚಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿವೆ. ಪ್ರತಿಭಟನಾಕಾರರು ನವಲಗುಂದ ಹಾಗೂ ನರಗುಂದನಲ್ಲಿ ಸರಕಾರಿ ಕಚೇರಿಗಳನ್ನು ಧ್ವಂಸ ಮಾಡಿದ್ದಾರೆ. ಮಹದಾಯಿ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಚ್ ನಡೆದಿದೆ. ಪೊಲೀಸರು ಅಮಾನವೀಯತೆಯಿಂದ ವರ್ತಿಸಿದ್ದಾರೆಂದು ಮಾತು ಕೇಳಿ ಬಂದಿದೆ. ಘಟನೆಯಲ್ಲಿ ತಾಯಂದಿರು ಹಾಗೂ ಮಕ್ಕಳಿಗೆ ತೊಂದರೆಯಾಗಿದೆ. ಇದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದರು.
ಪೊಲೀಸರು ಅಮಾನವೀಯತೆಯಿಂದ ವರ್ತಿಸಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಕಮಲಪಂತ್ ನೇತೃತ್ವದಲ್ಲಿ ತನಿಖೆ ನಡೆಸಿ, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡುತ್ತೇನೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.