ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 8 ಬಲಿ, 10ಕ್ಕೂ ಹೆಚ್ಚು ಮಂದಿಗೆ ಗಾಯ

ಶುಕ್ರವಾರ, 1 ನವೆಂಬರ್ 2013 (17:32 IST)
PR
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಯುವತಿಯರು ಸೇರಿದಂತೆ 8 ಮಂದಿ ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿದ್ದು, 6ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಂಜಾವೂರು ಜಿಲ್ಲೆಯ ವ್ಯಾಪ್ತಿಗೆ ಸೇರುವ ಕುಂಭಕೋಣಂ ಪಟ್ಟಣದ ಸಮೀಪವಿರುವ ತಿರುಪಮಂಡಲದ ಮುಲ್ಲಂಪಟ್ಟಿ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಗೆ ಕಾರಣ ತಿಳಿದು ಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗುತ್ತಿದೆ.

ಸ್ಥಳೀಯರ ಮಾಹಿತಿಯಂತೆ ಕಾರ್ಖಾನೆಯಲ್ಲಿ ಅಪಾರ ಪ್ರಮಾಣದಲ್ಲಿ ಪಟಾಕಿ ಸಂಗ್ರಹಿಸಡಲಾಗಿದ್ದು, ಸುಮಾರು 13ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಗೆ ಸ್ಥಳೀಯ ಗ್ರಾಮಸ್ಥರು ಸಾಥ್ ನೀಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಕಾರ್ಖಾನೆಯ ಮಾಲೀಕ ರಾಜಾರಂಗಂ ನಾಪತ್ತೆಯಾಗಿದ್ದಾನೆ.

ವೆಬ್ದುನಿಯಾವನ್ನು ಓದಿ