ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ ಎಂದು ಪ್ರಾರ್ಥಿಸುತ್ತೇನೆಂದೂ ತಿಳಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖರ್ಗೆ ಅವರ ಆರೋಗ್ಯ ಕುರಿತು ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದರು. ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಅಕ್ಟೋಬರ್ 3 ರಿಂದ ತಮ್ಮ ಕೆಲಸವನ್ನು ಪುನರಾರಂಭಿಸುವ ನಿರೀಕ್ಷೆಯಿದೆ. ಅವರ ಎಲ್ಲಾ ನಿಗದಿತ ಕಾರ್ಯಯೋಜನೆಗಳಿಗೆ ಹಾಜರಾಗುತ್ತಾರೆ. ಎಲ್ಲರೂ ನೀಡಿದ ಕಾಳಜಿ, ಬೆಂಬಲ ಮತ್ತು ಪ್ರೀತಿಗೆ ನಮ್ಮ ಕೃತಜ್ಞತೆಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.