ನವದೆಹಲಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಸಂಬಂಧಪಟ್ಟಂತೆ ಕೊನೆಗೂ ಗೃಹ ಸಚಿವ ಅಮಿತ್ ಶಾ ತಮ್ಮ ನಿಲುವು ಏನೆಂದು ಸ್ಪಷ್ಟಪಡಿಸಿದ್ದಾರೆ. ನಾವು ಏನಿದ್ದರೂ ಮಾತೃಶಕ್ತಿಯ ಪರ ಎಂದಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಕಾರಣ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹೈಕಮಾಂಡ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು. ಅಲ್ಲದೆ, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಬಿಜೆಪಿ ಕಚೇರಿ ಮುಂದೆಯೂ ಬೃಹತ್ ಪ್ರತಿಭಟನೆ ನಡೆಸಿತ್ತು.
ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದವರಾದರೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣಕ್ಕೆ ಕಾಂಗ್ರೆಸ್ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ಕೇಂದ್ರ ನಾಯಕರನ್ನು ಟಾರ್ಗೆಟ್ ಮಾಡಿಕೊಂಡಿದೆ. ಹೀಗಾಗಿ ಈಗ ಅಮಿತ್ ಶಾ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಿಲುವು ಏನೆಂದು ಸ್ಪಷ್ಟಪಡಿಸಿದ್ದಾರೆ.
'ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವು ಆಘಾತಕಾರಿಯಾಗಿದೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ, ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿಯ ಜೊತೆಗೆ ನಿಲ್ಲುತ್ತೇವೆ. ಮಾತೃಶಕ್ತಿಯ ಅವಮಾನವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಕಠಿಣ ಕ್ರಮ ಕೈಗೊಳ್ಳುವ ಬದಲು ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ಸಿಗರು ನಮಗೆ ಪ್ರಶ್ನೆ ಕೇಳುವ ಬದಲು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಬೇಕು' ಎಂದಿದ್ದಾರೆ.